ಕುಂದಾಪುರ ಮಿರರ್ ಸುದ್ದಿ…
ಉಡುಪಿ :ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಸೋಮವಾರ ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ನೃತ್ಯ ರೂಪಕ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ಕಲಾತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಸರಕಾರವು ತರಬೇತಿಯನ್ನು ಕಾರ್ಯಕ್ರಮವನ್ನು ಆಯೋಜಿಸಿದ್ದು, ತರಬೇತಿಯು ವಿದ್ಯಾರ್ಥಿಗಳು ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಕಲಿತ ವಿದ್ಯೆಯನ್ನು ಮುಂದಿನ ಜೀವನದಲ್ಲಿ ಆಳವಡಿಸಿಕೊಳ್ಳಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಎಂ, ಜಾನಪದ ಕಲಾವಿದರಾದ ಶಂಕರದಾಸ್ ಚಂಡ್ಕಳ, ರಾಘವೇಂದ್ರ ನಾಯ್ಕ್, ಕುಂದಾಪುರ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಿಕಾ ರಾಣಿ ನಿರೂಪಿಸಿ, ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಕುಲಾಲ್ ವಂದಿಸಿದರು.
