ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪ್ರಕೃತಿಯ ಆರಾಧನೆ ಹಾಗೂ ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ವೈಭವವನ್ನು ಸಾರುವ ‘ನಾಗರಪಂಚಮಿ’ ಹಬ್ಬವನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಕಾಲೇಜು ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಮತ್ತು ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನ ವಿದ್ಯಾರ್ಥಿಗಳು ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬ ಹರಿದಿನಗಳ ಹಿನ್ನೆಲೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಜೊತೆಗೆ, ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆ, ಸದಾಚಾರ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ಈ ಪವಿತ್ರ ಆಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮನೆಯಿಂದ ದೂರವಿದ್ದು ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಹಬ್ಬದ ಆಚರಣೆಯು ಕರಾವಳಿಯ ಕೌಟುಂಬಿಕ ಸೌಹಾರ್ದತೆ ಮತ್ತು ಹಬ್ಬದ ವಾತಾವರಣವನ್ನು ಸೃಷ್ಟಿಸಿಕೊಟ್ಟಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ, ಹಾಸ್ಟೆಲ್ ವಾರ್ಡನ್‌ಗಳು, ಉಪನ್ಯಾಸಕ ವೃಂದದವರು ಹಾಗೂ ಹಾಸ್ಟೆಲ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದು, ಪೂಜಾ ಕಾರ್ಯಕ್ರಮದಲ್ಲಿ ಖುಷಿಯಿಂದ ಪಾಲ್ಗೊಂಡರು.