ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಿಕ್ಷಕರ ದಿನಾಚರಣೆಯ ಅಂಗವಾಗಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೋಟೇಶ್ವರದಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರ ನೇತೃತ್ವದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಕಾಲೇಜಿನ ಮುಂಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಶಿಕ್ಷಕರೊಂದಿಗೆ ಕೈಜೋಡಿಸಿದ ಬಿ.ಎ. ವಿಭಾಗದ ವಿದ್ಯಾರ್ಥಿಗಳು ಕೂಡ ಸುಮಾರು ಒಂದೂವರೆ ಗಂಟೆಗಳ ಕಾಲ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ಪರಿಸರ ಸ್ವಚ್ಛತೆಯ ಮಹತ್ವವನ್ನು ಸಾರಿದರು.
ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ತಮ್ಮ ಕಾರ್ಯದ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗುವವರೂ ಹೌದು ಎಂಬ ಸಂದೇಶವನ್ನು ಸಾರಿದ ಈ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು. ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ, ಸ್ವಚ್ಛತೆ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದ ಕಾರ್ಯಕ್ರಮವಾಗಿ ಇದು ಗಮನಾರ್ಹವಾಯಿತು.












