ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಪ್ರತಿಯೊಬ್ಬ ಸಾಧಕನ ಪ್ರಯತ್ನದ ಹಿಂದೆಯೂ ಕ್ರಿಯಾಶೀಲತೆ ಹಾಗೂ ಪ್ರಯತ್ನಗಳು ಇರುತ್ತದೆ. ಇದಕ್ಕೆ ಕ್ರೀಡೆಯೂ ಹೊರತಾಗಿಲ್ಲ. ಶಾರೀರಿಕ ಹಾಗೂ ಮಾನಸಿಕ ಸಮತೋಲನ ಕಾಪಾಡುವ ಕ್ರೀಡೆ ಬದುಕಿನಲ್ಲಿ ಜೀವನೋತ್ಸಾಹ ತುಂಬುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಡಾ| ರಮೇಶ್ ಹೆಚ್.ಎನ್. ಹೇಳಿದರು.
ಇವರು ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಮಧು ಜಿ. ಆರ್. ಇವರು ಮಾತನಾಡಿ, ಕ್ಷಣ ಕ್ಷಣಕ್ಕೂ ಬದಲಾವಣೆಯನ್ನು ಕಾಣುವ ವೈಜ್ಞಾನಿಕ ಯುಗದಲ್ಲಿ ಇರುವ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಪರ್ಯಾಯ ಆಯ್ಕೆಯನ್ನು ಮುಕ್ತವಾಗಿರಿಸಿಕೊಳ್ಳಬೇಕು. ಮಕ್ಕಳ ಮನಸ್ಥಿತಿಗೆ ಪೂರಕವಾಗಿ ಹೆತ್ತವರು ಪ್ರತಿಸ್ಪಂದಿಸಬೇಕು. ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಓದಿಗಾಗಿ ಪ್ರೇರೇಪಿಸುತ್ತಿರುವುದರಿಂದಾಗಿ ಮಕ್ಕಳಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ. ಓದಿನ ಜೊತೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.
ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ| ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಅಂತರ್ – ತರಗತಿ ಕ್ರೀಡಾ ಪಂದ್ಯಾಟದ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ನಿರ್ವಹಣಾ ವಿಭಾಗದ ಉಪನ್ಯಾಸಕಿ ಅವಿತಾ ಕೊರೆಯಾ ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿನಿ ಪವಿತ್ರಾ ಪೈ ಪ್ರಾರ್ಥಿಸಿದರು.











