ಕುಂದಾಪುರ ಮಿರರ್ ಸುದ್ದಿ…



ಕುಂದಾಪುರ: ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಕಲ್ಮಾಡಿ ವೆಲಂಕಣಿ ಮಾತೆಗೆ ಈಗ 35 ವರ್ಷದ ಸಂಭ್ರಮದಲ್ಲಿದೆ. 1988ರ ಆಗಸ್ಟ್ 15ರಂದು ಅಂದಿನ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿದ್ದ ಅತೀ ವಂದನೀಯ ಡಾ. ಬಾಸಿಲ್ ಡಿ’ಸೋಜಾ ರವರು ಪ್ರತಿಷ್ಠಾಪಿಸಿದರು. ಅಂದಿನಿಂದ ಇಂದಿನವರೆಗೂ ವೆಲಂಕಣಿ ಮಾತೆಯ ಸ್ಮರಣೆ ನಿರಂತರವಾಗಿ ಈ ಕೇಂದ್ರದಲ್ಲಿ ನಡೆಯುತ್ತಿದೆ ಹಾಗೂ ಪ್ರತಿದಿನ ಹಲವಾರು ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದ್ದಾರೆ. ಕಳೆದ ವರ್ಷವಷ್ಟೇ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಲೋ ರವರು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದ್ದರು.
ಪ್ರತಿ ವರ್ಷದಂತೆ ಈ ಬಾರಿ ಕೂಡ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು 15 ಅಗಸ್ಟ್ 2023 ಮಂಗಳವಾರ ದಂದು ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಆಗಸ್ಟ್ 6ರಿಂದ 14ರ ವರೆಗೆ ನವೇನಾ ಪ್ರಾರ್ಥನೆಗಳು ಪ್ರತಿದಿನ ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಆಗಸ್ಟ್ 6ರ ಭಾನುವಾರ ಸಾಯಂಕಾಲ 3:45ಕ್ಕೆ ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜೆರಾಲ್ ಆಗಿರುವ ಮೊನ್ಸಿ. ಫರ್ಡಿನಾಂಡ್ ಗೊನ್ಸಾಲ್ವಿಸ್ ರವರು ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿದ್ದಾರೆ.
ಆಗಸ್ಟ್ 13ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಆದಿಉಡುಪಿ ಜಂಕ್ಷನ್ ನಿಂದ ಕಲ್ಮಾಡಿ ದೇವಾಲಯದ ವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿದ್ದು, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾಗಿರುವ ಅ. ವಂ. ಡಾ. ಲುವಿಸ್ ಪಾವ್ಲ್ ಡಿ’ಸೋಜಾ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಚಾಲನೆ ನೀಡಲಿದ್ದಾರೆ.
ಆಗಸ್ಟ್ 15ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ದಿವ್ಯ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ. ಡಾ. ಜೆರಾಲ್ಡ್ ಐಸಾಕ್ ಲೋಲೋ ನೆರೆವೇರಿಸಲಿದ್ದಾರೆ. ಉಡುಪಿ ಧರ್ಮಪ್ರಾಂತ್ಯದ ಅನೇಕ ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಅದೇ ದಿನ ಮಧ್ಯಾಹ್ನ 2 ಗಂಟೆಗೆ, 4 ಗಂಟೆಗೆ ಹಾಗೂ ಸಂಜೆ 6 ಗಂಟೆಗೆ ಕೊಂಕಣಿ ಭಾಷೆಯಲ್ಲಿ ಇತರೆ ಬಲಿಪೂಜೆಗಳು ನಡೆಯಲಿವೆ ಎಂದು ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ರೆಕ್ಟರ್ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











