ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕುಂದಾಪುರ ಶೈಕ್ಷಣಿಕ ವಲಯದ ಕನ್ನಡ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪೊಲೀಸ್ ಎಂದರೇ ಭಯವಲ್ಲ ಭರವಸೆ ಎಂಬ ಶೀರ್ಷಿಕೆಯಡಿ ‘ನಾ ಕಂಡಂತೆ ಪೊಲೀಸ್’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಲ್ಲಿರುವ ಪೊಲೀಸರ ಬಗೆಗಿನ ಅಭಿಪ್ರಾಯವನ್ನು ಅಕ್ಷರ ರೂಪದಲ್ಲಿ ಹೊರ ಹಾಕಲು ನ.18ರ ಶನಿವಾರ ಅಪರಾಹ್ನ 2.30ಕ್ಕೆ ಕುಂದಾಪುರ ಬೋರ್ಡ್ ಹೈಸ್ಕೂಲ್‌ನ ಕಲಾಮಂದಿರದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ಇವರು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಗಣಪತಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಪಾಧ್ಯಕ್ಷ ವಿನಯ ಪಾಯಸ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನ.30ರಂದು ನಡೆಯುವ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಬಹುಮಾನ ವಿತರಿಸಲಿದ್ದು ಸಮಾಜದ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
ತಾಲೂಕಿನ ಎಲ್ಲಾ ಸರಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಸೇರಿದಂತೆ ಒಟ್ಟು 27 ಶಾಲೆಗಳ ಪೈಕಿ ಆಯ್ದ 5 ಮಂದಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.











