ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0
462

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ, ಡಿಸೆಂಬರ್ 19: ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್‍ಗೆ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ದೇಶದಲ್ಲಿಯೇ ನಿಷೇಧಿತ ಚಟುವಟಿಕೆಯಾಗಿದ್ದು, ಈ ಕೆಲಸಕ್ಕೆ ಯಾವುದೇ ವ್ಯಕ್ತಿಯನ್ನು ಬಳಸಿಕೊಂಡರೆ ಅವರ ಮೇಲೆ ಮ್ಯಾನ್ಯುಯಲ್ ಸ್ಕ್ಯಾಂವೆಂಜರ್‍ಗಳಾಗಿ ಉದ್ಯೋಗದ ನಿಷೇಧ ಹಾಗೂ ಅವರ ಪುನರ್ವಸತಿ ಕಾಯಿದೆ 2013 ರ ಸೆಕ್ಷನ್ 8 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಅಪರಾಧ ಸಾಬೀತಾದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ಇದೆ. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು ಎಂದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಅವರು, ಇತರೆ ಸ್ವಚ್ಛತಾ ಕಾರ್ಯಗಳನ್ನು ಸಾಧ್ಯವಾದಷ್ಟು ಯಂತ್ರಗಳ ಸಹಾಯದಿಂದ ಮಾಡಲು ಮುಂದಾಗಬೇಕು ಎಂದರು.

Click Here

ಸ್ವಚ್ಛತಾ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಬಳಸುವುದರೊಂದಿಗೆ ಸ್ವಚ್ಛತೆ ಕೈಗೊಳ್ಳಬೇಕು. ಒಂದಿಮ್ಮೆ ಬರಿಗೈಲಿನಿಂದ ಸ್ವಚ್ಛತೆ ಮಾಡಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಪೌರ ಕಾರ್ಮಿಕರಿಗೆ ಅತ್ಯುತ್ತಮ ಗುಣಮಟ್ಟದ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಅವರುಗಳ ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‍ಅಪ್‍ಗಳನ್ನು ಮಾಡಿಸಬೇಕು ಹಾಗೂ ಅವರುಗಳಿಗೆ ಉತ್ತಮ ಗುಣಮಟ್ಟದ ಉಪಾಹಾರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ 154 ಜನ ಪೌರಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. 10 ಜನ ಕಾರ್ಮಿಕರ ನೇಮಕಕ್ಕೆ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಪರಿಶೀಲನೆಯನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.

ಸರಕಾರ ಮ್ಯಾನ್ಯುಯಲ್ ಸ್ಕ್ಯಾಂವೆಂಜರರ ಪುನರ್ವಸತಿಗಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವರುಗಳನ್ನು ಅರ್ಹ ಫಲನಾಭವಿಗಳನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here