ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ನಾನೂರು ಸೀಟುಗಳ ಅತೀ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಅಪವಿತ್ರ ಮೈತ್ರಿಯಿಂದ ಸರ್ಕಾರ ನಡೆಸುತ್ತಿರುವ ಬಿಜೆಪಿ ದೇಶದಲ್ಲಿ ಅತಂತ್ರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.
ಕುಂದಾಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯ ಅಪೂರ್ಣ ಶ್ರೀರಾಮ ಮಂದಿರ ಹಿಂದೂ ಧರ್ಮಕ್ಕೆ ಬಿಜೆಪಿ ಮಾಡಿದ ಅಪಮಾನ. ರಾಮ ಮಂದಿರ ಇರುವ ಉತ್ತರ ಪ್ರದೇಶದಲ್ಲಿಯೇ ಬಿಜೆಪಿ ನೆಲಕಚ್ಚಿದೆ. ಬಜೆಟ್ ಮೈತ್ರಿ ಉಳಿಸಿಕೊಳ್ಳುವುದಕ್ಕಾಗಿ ಮಂಡಿಸಿದಂತಿದೆ. ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದವರು ಈಗ ದೋಸ್ತಿ ಮಾಡಿಕೊಂಡಿದ್ದಾರೆ ಎಂದಿದ್ದಲ್ಲದೇ, ಲೋಕಸಭೆಯಲ್ಲಿ ರಾಹುಲ್ ಗಾಂಧಿ ಎದುರು ಮೋದಿ ಧ್ವನಿ ಕಳೆದುಕೊಂಡಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡುತ್ತಲೇ ಇಲ್ಲ. ಧರ್ಮಾಧರಿತ ರಾಜಕಾರಣವೇ ಬಿಜೆಪಿಯ ಗುರಿ ಎಂದು ಅವರು ಟೀಕಿಸಿದರು. ಇದೇ ಸಂದರ್ಭದಲ್ಲಿ ದಕ್ಷಿಣ ಭಾರತ ನೆರೆ ಪೀಡಿತ ಪ್ರದೇಶಗಳಾಗಿ ಬದಲಾಗಿದೆ, ಪ್ರಕೃತಿ ವಿಕೋಪದಿಂದ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸಿದರು.
ವಿಧಾನಸಭೆ ಹಾಗೂ ವಿಧಾನಪರಿಷತ್ ಗಳಲ್ಲಿ ವಿರೋಧ ಪಕ್ಷಗಳು ನಡೆದುಕೊಳ್ಳಬೇಕಾದ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ. ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬರಬೇಕೆಂದು ಹಗಲು ಕನಸು ಕಾಣುತ್ತಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸುದೀರ್ಘ ಕಾಲದವರೆಗೆ ಇರುವುದಿಲ್ಲ. ಈ ಮೈತ್ರಿಗೆ ಭವಿಷ್ಯವಿಲ್ಲ. ಕರಾವಳಿಯಲ್ಲಿ ಬಿಜೆಪಿ ಧರ್ಮಾಧರಿತ ಬೀಜವನ್ನು ಬಿತ್ತಿದೆ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾಂಗ್ರೆಸ್ ಹೋರಾಡಲಿದೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಘಟ್ಟಗಳನ್ನು ಉಳಿಸಿಕೊಳ್ಳುವ ದೃಷ್ಟಿಯಲ್ಲಿ ಗಾಡ್ಗೀಳ್ ಹಾಗೂ ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಕ್ಕೆ ತರುವಂತೆಯೂ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಅವರು ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಬೈಂದೂರು ಬ್ಲಾಕ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮೊಳಹಳ್ಳಿ ದಿನೇಶ್ ಹೆಗ್ಡೆ , ರಾಜು ಪೂಜಾರಿ, ವಿಕಾಸ್ ಹೆಗ್ಡೆ, ವಿನೋದ್ ಕ್ರಾಸ್ತ್, ಇಚ್ಚಿತಾರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು..











