ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0
338

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ : ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು.

Click Here

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ, ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇರುವುದರಿಂದ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗಿರಬೇಕು ಎಂದ ಅವರು, ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ತಂಡಗಳು ಸಭೆ ಸೇರಿ, ಇವುಗಳ ನಿಯಂತ್ರಣ ಕಾರ್ಯದ ಬಗ್ಗೆ ಚರ್ಚಿಸಿ, ಕ್ರಮವಹಿಸಬೇಕು ಎಂದರು.

ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಯಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರುಗಳು ಶಾಂತಿ ಸಭೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲಾದ್ಯಂತ ತಪಾಸಣಾ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಸದ್ರಿ ಕೇಂದ್ರಗಳು ಜಾನುವಾರು ಸಾಗಾಣಿಕೆ ಮಾಡುವ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ ಜಾನುವಾರು ಸಾಗಣಿಕೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುದು ಎಂದರು.
ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here