ಉಡುಪಿ :ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ – ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಆದೇಶ

0
533

Click Here

Click Here

ಪಿಪಿಪಿ ಮಾದರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು.

ಕಾಪು ತಾಲೂಕಿನ ಹೆಜಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಮಲ್ಪೆ ಬಂದರು ನಿರ್ವಹಣೆಗೆ ಕ್ರಮ
ಮಲ್ಪೆ ಬಂದರು ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಸಿಸಿಟಿವಿ ಅಳವಡಿಸಿ, ಭದ್ರತೆಯ ಜೊತೆಗೆ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬಂದರು ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರು.

ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ಒತ್ತು
ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪ್ರವಾಸಿ ತಾಣಗಳಲ್ಲಿ 18 ವರ್ಷ ಒಳಗಿನ ಮಕ್ಕಳು ಕೆಲಸ ನಿರ್ವಹಿಸದಂತೆ ನೋಡಿಕೊಳ್ಳಬೇಕು. ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.

Click Here

ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕಠಿಣ ಕ್ರಮ
ಜಿಲ್ಲೆಯಲ್ಲಿ ರೈತರಿಗೆ ಕಳಪೆ ಬೀಜ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೃಷಿ ಸಲಕರಣೆಗಳು ಉಡುಪಿ ಜಿಲ್ಲೆಯಲ್ಲಿ ಸರಿಯಾಗಿ ಸರಬರಾಜು ಆಗುತ್ತಿಲ್ಲ. ಇದು ಕೂಡ ಹೆಚ್ಚಾಗಬೇಕು ಎಂದರು.‌

ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡಬೇಕು. ಹೆಚ್ಚು ಆದಾಯ ತರುವ ಹಣ್ಣುಗಳ ಬಗ್ಗೆ ಜನರಿಗೆ ಜಾಗೃತಿ ಮಾಡಿಸಬೇಕು. ಮುಂದಿನ ಸಭೆ ವೇಳೆ ಫೀಲ್ಡ್ ಗಿಳಿದು ಕೆಲಸ ಮಾಡಿದ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದರು.

ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ರೈತರಿಗೆ ಸೂಕ್ತ ಪರಿಹಾರ ನೀಡಿ
ವಾರಾಹಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲು, ಐದು ವರ್ಷಗಳ ಹಿಂದೆಯೇ ಭೂಸ್ವಾಧೀನ ಆಗಿದ್ದು, ಇದುವರೆಗೂ ಪರಿಹಾರ ನೀಡಿಲ್ಲ. ಜೊತೆಗೆ ಬೆಳೆ ಬೆಳೆಯಲು ಬಿಟ್ಟಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಮುಂದಿನ ಸಭೆ ವೇಳೆಗೆ ರೈತರಿಗೆ ಸೂಕ್ತ ಪರಿಹಾರ ನೀಡಿರಬೇಕು, ಡೀಮ್ಡ್ ಫಾರೆಸ್ಟ್ ನಲ್ಲಿ ಕಾಮಗಾರಿಗೆ ಅಗತ್ಯವಿರುವ ಭೂಮಿಗೆ ಅನುಮತಿ ನೀಡಬೇಕು ಎಂದರು.

ಇಲಾಖೆವಾರು ಮಾಹಿತಿ ಸಂಗ್ರಹಿಸಿದ ಸಚಿವರು
ಸಾರಿಗೆ, ನೀರಾವರಿ, ಪಶು ಸಂಗೋಪನೆ, ಆರೋಗ್ಯ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಸಚಿವರು, ಸೂಕ್ತ ಉತ್ತರ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ಇಲಾಖೆಯ ಸಾಧಕ-ಭಾದಕಗಳ ಕುರಿತು ಚರ್ಚೆ ನಡೆಸಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ ಸಚಿವರು
2024-25ನೇ ಸಾಲಿನಲ್ಲಿ ಉಡುಪಿ ಜಿಲ್ಲೆ ಎಸ್ಎಸ್ಎಲ್ಸಿ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಚಿವರು ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here