ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಲಾರಿ ಮತ್ತು ಬಸ್ ನಡುವೆ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿಗಳ ಸಹಿತ ಏಳು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಹೊಸಾಡು ಗ್ರಾಮದ ಅರಾಟೆ ಸೇತುವೆ ಸಮೀಪ ಸೋಮವಾರ ಸಂಜೆ ನಡೆದಿದೆ.
ಕುಂದಾಪುರದಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಕುಂದಾಪುರ ಕಡೆ ಹೋಗುತ್ತಿದ್ದ ಸರಕು ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅರಾಟೆ ಸೇತುವೆ ಸಮೀಪ ವಿರುದ್ಧ ದಿಕ್ಕಿನಲ್ಲಿ ಬಂದು ಬಸ್ಸಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳ ಸಹಿತ ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖುರೈಶಾ (36), ಶಮೀನಾ ಬಾನು (40), ಅಸೀಫಾ (21), ರಿಹಾನಾ (37), ನಿಶಾ (20) ಮತ್ತು ಆಶ್ರಿತಾ (20) ಗಾಯಗೊಂಡಿದ್ದು, ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ ಶಾಲೆ ಬಿಡುವ ಸಮಯವಾಗಿದ್ದರಿಂದ ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಅಪಘಾತದಲ್ಲಿ ಬಸ್ಸಿನ ಹಾಗೂ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು, ಸ್ಥಳೀಯರ ಸಹಾಯದಿಂದ ರಾ.ಹೆ.ಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅರಾಟೆ ಹಳೆ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಹೊಸ ಸೇತುವೆಯಲ್ಲಿ ಕಳೆದ ಸುಮಾರು ಒಂದು ವರ್ಷಗಳಿಂದ ಏಕಮುಖ ಸಂಚಾರ ವ್ಯವಸ್ಥೆ ಮಾಡಿರುವುದರಿಂದ ಹೆಚ್ಚು ಅಪಘಾತಗಳು ನಡೆಯುತ್ತಿದೆ. ಹಳೆ ಸೇತುವೆಯನ್ನು ದುರಸ್ಥಿಪಡಿಸಿ ಅಥವಾ ಹೊಸ ಸೇತುವೆ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಮಾಡಿದ ಮನವಿಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಸೇತುವೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯಿಂದ ಇನ್ನೆಷ್ಟು ಅಪಘಾತಗಳು ನಡೆಯಬೇಕೋ ದೇವರೇ ಬಲ್ಲ ಎಂದು ಸರಕಾರದ ವಿರುದ್ಧ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.











