ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಮಂಗಳವಾರ ಈಜಲು ಹೋದ ಸಂಕೇತ್ (16), ಸೂರಜ್ (15 ), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಬೆನ್ನಲ್ಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದಿರುವ ಸಚಿವರು, ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.











