ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅರ್ಥಪೂರ್ಣ ಪ್ರಥಮ ಪೋಷಕರ ಸಭೆ

0
116

Click Here

Click Here

ಗುಣಮಟ್ಟದ ಶಿಕ್ಷಣಕ್ಕೆ ಪೋಷಕರು–ಶಿಕ್ಷಕರ ಸಮನ್ವಯ ಅಗತ್ಯ: ಗಣ್ಯರ ಅಭಿಮತ

ಕುಂದಾಪುರ ಮಿರರ್ ಸುದ್ದಿ…
ಅಂಪಾರು :ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ.) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜಯ ಗಾಂಧಿ ಇಂಗ್ಲಿಷ್ ಮಾಧ್ಯಮ ಶಾಲೆ, ಅಂಪಾರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಪ್ರತಿಷ್ಠಿತ ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಭಾಗವಹಿಸಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು.

ವೇದಿಕೆಯಲ್ಲಿ ಶೈಕ್ಷಣಿಕ ಸಂಚಾಲಕರಾದ ಸುಭಾಷ್ಚಂದ್ರ ಶೆಟ್ಟಿ ಕೊಡ್ಲಾಡಿ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ, ಉಮೇಶ್ ಕೊಠಾರಿ, ಹಾಗೂ ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ ಶ್ರೀ ಭರತ್ ಶೆಟ್ಟಿ ಮಾತನಾಡಿ, ಯಾವುದೇ ಆರ್ಥಿಕ ಮೂಲವಿಲ್ಲದೆ ಸಮಾಜಸೇವೆಯ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯವನ್ನು ಹೃದಯಪೂರ್ವಕವಾಗಿ ಶ್ಲಾಘಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಸೇವಾ ಮನೋಭಾವ ಅಪರೂಪವಾಗಿದ್ದು, ಸಂಸ್ಥೆಯ ಅಭಿವೃದ್ಧಿಗಾಗಿ ಪ್ರತಿಯೊಬ್ಬ ಪೋಷಕರೂ ಟ್ರಸ್ಟ್‌ಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

Click Here

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ಎದುರಿಸಲು ಕಠಿಣ ಪರಿಶ್ರಮ, ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸ ಅತ್ಯಗತ್ಯ ಎಂದು ತಿಳಿಸಿದರು. ಪೋಷಕರ ಆರ್ಥಿಕ ಸ್ಥಿತಿ, ಗ್ರಾಮೀಣ ಹಿನ್ನೆಲೆ ಅಥವಾ ತಾವು ಓದುತ್ತಿರುವ ಶಾಲೆ ಯಾವುದಾದರೂ ಆಗಿರಲಿ, ಸಾಧಿಸುವ ಛಲ ಮತ್ತು ಶ್ರಮ ಇದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂಬ ಆತ್ಮವಿಶ್ವಾಸವನ್ನು ತುಂಬಿದರು.

ಶೈಕ್ಷಣಿಕ ಸಂಚಾಲಕರಾದ ಸುಭಾಷ್ಚಂದ್ರ ಶೆಟ್ಟಿ ಕೊಡ್ಲಾಡಿ ಅವರು ಬಾಲ್ಯದಿಂದಲೇ ಉತ್ತಮ ಪೋಷಕತ್ವದ ಅಗತ್ಯತೆ, ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪೋಷಕರ ಜವಾಬ್ದಾರಿ ಹಾಗೂ ಮನೆಯ ವಾತಾವರಣದ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

ಟ್ರಸ್ಟ್‌ನ ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ ಮತ್ತು ಉಮೇಶ್ ಕೊಠಾರಿ ಅವರು ನೂತನ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ, ಪೋಷಕರು, ಶಿಕ್ಷಕರು ಹಾಗೂ ಟ್ರಸ್ಟ್ ಒಂದೇ ಗುರಿಯೊಂದಿಗೆ ಕೈಜೋಡಿಸಿದಾಗ ಮಾತ್ರ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ, ನೈತಿಕ ಮೌಲ್ಯಗಳು ಮತ್ತು ಉತ್ತಮ ವ್ಯಕ್ತಿತ್ವವನ್ನು ಮಕ್ಕಳಲ್ಲಿ ಬೆಳೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷೀಯ ಭಾಷಣದಲ್ಲಿ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸೇವೆಯೇ ಟ್ರಸ್ಟ್‌ನ ಪ್ರಮುಖ ಧ್ಯೇಯವಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ಟ್ರಸ್ಟ್ ಸದಾ ಬದ್ಧವಾಗಿದೆ ಎಂದು ತಿಳಿಸಿದರು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದ್ದು, ಪೋಷಕರು, ಶಿಕ್ಷಕರು ಹಾಗೂ ಟ್ರಸ್ಟ್ ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸಿದಾಗ ಮಾತ್ರ ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಅವರು ಶಾಲೆಯ ನೂತನ ಶಿಕ್ಷಕರನ್ನು ಪೋಷಕರಿಗೆ ಪರಿಚಯಿಸಿ, 2026-27ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶೈಕ್ಷಣಿಕ ಯೋಜನೆ, ಸಹಪಠ್ಯ ಚಟುವಟಿಕೆಗಳು, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ ರೂಪಿಸಲಾದ ವಿಶೇಷ ಕಾರ್ಯಕ್ರಮಗಳು ಹಾಗೂ ಶಾಲೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು, ಎಲ್ಲಾ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಪರಸ್ಪರ ವಿಶ್ವಾಸ, ಸಹಕಾರ ಮತ್ತು ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣದ ಸಂಕಲ್ಪದೊಂದಿಗೆ ಸಭೆಯು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

Click Here

LEAVE A REPLY

Please enter your comment!
Please enter your name here