ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ :ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರದಲ್ಲಿ ಪ್ರೀ ಕೆಜಿ, ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುವುದು ಅಗತ್ಯ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕ್ರೀಡಾಕೂಟಗಳು ಮಕ್ಕಳ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ” ಎಂದು ನುಡಿದರು.
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ಯಾಮಲಾ ಗಣೇಶ್, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪೋಷಕರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಅನ್ನಪೂರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಫಿಲೋಮಿನ ಸ್ವಾಗತಿಸಿದರೆ, ಸಹಶಿಕ್ಷಕಿ ಜ್ಯೋತಿ ವಂದಿಸಿದರು.
ಉದ್ಘಾಟನಾ ಸಮಾರಂಭದ ನಂತರ ಪುಟಾಣಿ ಮಕ್ಕಳಿಗಾಗಿ ಜಿಗ್ಜ್ಯಾಗ್ ರೇಸ್, ಬಾಲ್ ಕಲೆಕ್ಟಿಂಗ್ ಗೇಮ್, ಸಾಫ್ಟ್ ಬಾಲ್ ಥ್ರೋ, 50 ಮೀಟರ್ ಓಟ ಮತ್ತು ಅಡೆತಡೆ ಓಟ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷವಾಗಿ ಪುಟಾಣಿ ಮಕ್ಕಳಿಗಾಗಿಯೇ ಏರ್ಪಡಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ಮಕ್ಕಳು ಸಂತಸ-ಸಡಗರದಿಂದ ಪಾಲ್ಗೊಂಡು, ಪ್ರತಿ ಕ್ಷಣವನ್ನೂ ಸಂಭ್ರಮಿಸಿದರು. ಕ್ರೀಡೆಯಲ್ಲಿ ಮಕ್ಕಳು ತೋರಿದ ಸಹಭಾಗಿತ್ವ ನೆರೆದಿದ್ದ ಪೋಷಕರು, ಶಿಕ್ಷಕರು ಮತ್ತು ಪುಟಾಣಿಗಳಲ್ಲಿ ಸಂತಸ ಮೂಡಿಸಿದವು.
ಮಕ್ಕಳಲ್ಲಿ ಕ್ರೀಡಾಸಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.












