ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶಿಕ್ಷಣವೆಂದರೆ ಕೇವಲ ಓದು, ಪರೀಕ್ಷೆ, ಅಂಕಗಳಿಗೆ ಮಾತ್ರವಲ್ಲ, ಅದು ಕಲಿಕೆಯೊಂದಿಗೆ ಜೀವನ ಕೌಶಲ್ಯವನ್ನು ಬೆಳೆಸಿಕೊಳ್ಳುವ ಕಲೆ ಎಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಂಸ್ಕøತಿಕ ಚಿಂತಕ ಡಾ| ಶ್ರೀಕಾಂತ್ ರಾವ್ ಸಿದ್ಧಾಪುರ ಅಭಿಪ್ರಾಯಪಟ್ಟರು.
ಅವರು ಡಾ| ಬಿ.ಬಿ. ಹೆಗ್ಡೆ ಕಾಲೇಜಿನ 2022-23ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ಇರುವ ಸಾಧನ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಹಾಗೂ ವಿವಿಧ ವೇದಿಕೆಗಳ ಸಂಯೋಜಕ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ಉಪನ್ಯಾಸಕ ಶರತ್ ಅತಿಥಿಗಳನ್ನು ಪರಿಚಯಿಸಿದರು. ಕಾಲೇಜಿನ ವಿವಿಧ ವೇದಿಕೆಗಳ ಸಂಯೋಜಕ ಹಾಗೂ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕ ಹರೀಶ್ ಬಿ. ವಂದಿಸಿದರು. ವಾಣಿಜ್ಯ ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.











