ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

0
451

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡಿದ್ದು, ಕಾಲೇಜುಗಳಲ್ಲಿ ವಿಶೇಷ ನೋಂದಣಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮತದಾರರ ಪಟ್ಟಿಯ ಪರಿಶೀಲನೆ ಸಂದರ್ಭದಲ್ಲಿ ತಾನೂ ಸಹ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಸರುಗಳನ್ನು ಕೈಬಿಡುವಾಗ ಅದಕ್ಕೆ ಪೂರಕವಾದ ಎಲ್ಲಾ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಮಹಜರು ಮಾಡಲಾಗಿದೆ ಎಂದರು.

Click Here

ನವೆಂಬರ್ 9 ರಿಂದ ಆರಂಭಗೊಂಡಿರುವ ವಿಶೇಷ ಪರಿಷ್ಕರಣೆ ಕುರಿತಂತೆ ಪ್ರತೀ ವಾರದ ಮತದಾರರ ಪಟ್ಟಯಲ್ಲಿನ ಸೇರ್ಪಡೆ, ತಿದ್ದುಪಡಿ, ಬದಲಾವಣೆ, ತೆಗೆದುಹಾಕುವಿಕೆ ಕುರಿತ ವಿವರವಾದ ಅಂಕಿ ಅಂಶಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ಪರಿಶೀಲನೆಗೆ ನೀಡಲಾಗುತ್ತಿದ್ದು, ಕ್ಷೇತ್ರಮಟ್ಟದ ಎಲ್ಲಾ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿದ್ದಲ್ಲಿ ಮುಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದರು.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿನ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಉಚಿತ ಸಹಾಯವಾಣಿ ಸಂಖ್ಯೆ 1950 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ರಾಜಕೀಯ ಪಕ್ಷಗಳ ವತಿಯಿಂದ ಬೂತ್ ಮಟ್ಟದ ಸಹಾಯಕರ ಪಟ್ಟಿಯನ್ನು ಶೀಘ್ರವಾಗಿ ನೀಡಿದಲ್ಲಿ ಅವರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಹಾಗೂ ಸದ್ರಿಯವರು ಬಿ.ಎಲ್.ಓ ಗಳೊಂದಿಗೆ ತಮ್ಮ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯ ಸಮಸ್ಯೆಗಳ ಬಗ್ಗೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜೆ.ಡಿ.ಎಸ್ ನ ಜಯರಾಮ ಆಚಾರ್ಯ, ಕಾಂಗ್ರೆಸ್‌ನ ಹಬೀಬ್ ಅಲಿ, ಸಂತೋಷ್ ಕುಲಾಲ್, ನವೀನ್ ಚಂದ್ರ ಎಸ್ ಸುವರ್ಣ ಉಪಸ್ಥಿತರಿದ್ದರು

Click Here

LEAVE A REPLY

Please enter your comment!
Please enter your name here